ಬರ ಘೋಷಣೆ, ಕಾಡಾನೆ ಹಾವಳಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಬೇಲೂರು ಬಂದ್ ಯಶಸ್ವಿ
ರೈತಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆ

ಬೇಲೂರು: ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಮಲೆನಾಡು ಭಾಗದಲ್ಲಿ ತೀವ್ರವಾಗಿರುವ ಕಾಡಾನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಬಗರ್‌ಹುಕುಂ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಅರ್ಹ ರೈತರಿಗೆ ಭೂಮಿಯ ಹಕ್ಕು ಕಲ್ಪಿಸಬೇಕು ಎಂದು ಆಗ್ರಹಿಸಿ ರೈತಸಂಘ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಬೇಲೂರು ಬಂದ್ ಯಶಸ್ವಿಯಾಗಿ ನೆರವೇರಿತು.
ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಬಹುತೇಕ ಅಂಗಡಿಮುಂಗಟ್ಟುಗಳು, ಹೋಟೆಲ್‌ಗಳು ಬೆಳಗ್ಗಿನಿಂದಲೇ ಸ್ಥಗಿತಗೊಂಡಿದ್ದವು. ಚನ್ನಕೇಶವ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ರೈತಸಂಘದ ಮುಖಂಡರು ಪ್ರಮುಖ ವೃತ್ತಗಳ ಮೂಲಕ ಸಾಗಿ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ದೂರದ ಊರುಗಳಿಂದ ಬೇಲೂರಿಗೆ ಆಗಮಿಸಿದ್ದ ಪ್ರಯಾಣಿಕರು ಹಾಗೂ ಪ್ರವಾಸಿಗರು ಬಂದ್‌ನಿಂದಾಗಿ ತೊಂದರೆ ಅನುಭವಿಸುವಂತಾಯಿತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಪಟ್ಟಣದ ಹೊರವಲಯದಲ್ಲಿಯೇ ಪ್ರಯಾಣಿಕರನ್ನು ಇಳಿಸಿ ವಾಪಸ್ ತೆರಳಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
